*ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಗಂಭೀರ ಆರೋಪ*
*ಗ್ಯಾರೆಂಟಿಗಳ ಬಗ್ಗೆ ಶ್ವೇತ ಪತ್ರ ಹೊರಡಿಸಲಿ : ಸವಾಲು*
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್ ನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮುಸ್ಲಿಂ ತುಷ್ಟೀಕರಣದ ರಾಜಕರಣ ಮಾಡುತ್ತಿದೆ ಎಂದು ಹರಿ ಹಾಯ್ಡರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಹಳೇ ಹುಬ್ಬಳ್ಳಿ ಗಳಭೆಕೋರರ ಮೇಲಿನ ಕೇಸ್ ರದ್ದುಪಡಿಸಿತು. ಇದೀಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಮುಸ್ಲಿಮರ ಮೇಲಿನ ಕೇಸ್ ಹಿಂಪಡೆಯಲು ತಯಾರಿ ನಡೆಸಿದೆ ಎಂದು ಆರೋಪಿಸಿದರು.
ಸುಳ್ಳು ಹೇಳೋದರಲ್ಲಿ ಕಾಂಗ್ರೆಸ್ಸಿಗರೇ ನಿಸ್ಸೀಮರು. ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಜೋಶಿ ಸವಾಲು ಹಾಕಿದರು.
ರಾಜ್ಯ ಸರ್ಕಾರದ್ದು ಎಲ್ಲಾ ಬೋಗಸ್ ಗ್ಯಾರೆಂಟಿಗಳು ಎಂದರಲ್ಲದೆ
ಈ ಸರ್ಕಾರ ಒಂದೆಡೆ ಕೊಟ್ಟು, ಮತ್ತೊಂದಲ್ಲಿ ಅದರ ಹತ್ತರಷ್ಟು ಕಿತ್ತುಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ, ವಿದ್ಯುತ್ ದರ, ಹಾಲಿನ ದರ, ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ರೈತರ ಪಹಣಿ ಶುಲ್ಕ ಹೀಗೆ ಎಲ್ಲದರಲ್ಲೂ ಬೆಲೆ ಏರಿಕೆ ಹೊರೆ ಹೊರಿಸಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲೆಷ್ಟು ಜನರಿಗೆ ತಲುಪಿವೆ? ಅದರ ಆದಾಯದ ಮೂಲ, ವೆಚ್ಚ ಸಮಗ್ರ ಮಾಹಿತಿಯುಳ್ಳ ಶ್ವೇತ ಪತ್ರ ಹೊರಡಿಸಲಿ ಮೊದಲು ಎಂದು ಸಚಿವ ಜೋಶಿ ಆಗ್ರಹಿಸಿದರು.
ಗೃಹಲಕ್ಷ್ಮಿ ಹಣ ಎಷ್ಟು ಜನರಿಗೆ ತಲುಪಿದೆ? ಇದರಲ್ಲಿ ತಾರತಮ್ಯ ತೋರಲಾಗಿದೆ. ಶಕ್ತಿ ಯೋಜನೆ ಕೊಟ್ಟರೆ ಪೆಟ್ರೋಲ್, ಡೀಸೆಲ್, ಪ್ರಯಾಣ ದರ ಹೆಚ್ಚಿಸಿದ್ದಾರೆ. ಫ್ರೀ ವಿದ್ಯುತ್ ಘೋಷಿಸಿದಂತೆ ಇಲ್ಲ. ಅಲ್ಲದೇ, 3 ರೂ. ಯುನಿಟ್ ಇದ್ದ ವಿದ್ಯುತ್ ಶುಲ್ಕ ಈಗ 7.50 ರೂ.ಗೆ ಹೆಚ್ಚಿಸಿದ್ದಾರೆಂದರು.
ಸುದ್ದಿಗೋಷ್ಠಿಯಲ್ಲಿ ಕೇಂದ್ರದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಪ್ರತಾಪ ಸಿಂಹ, ಡಾ.ಅಶ್ವಥ್ ನಾರಾಯಣ ಮತ್ತಿತರ ಪ್ರಮುಖರಿದ್ದರು.