*ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಿದ ಸಿಎಂ*
ಬೆಂಗಳೂರು 30: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.
ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.
ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದರು.