*ಜಾತಿ ಗಣತಿ ದಿನಾಂಕ ಕೂಡಲೇ ನಿಗದಿಗೊಳಿಸಿ : ಸಿಎಂ/ ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ ಸಿಕ್ಕ ಮಾನ್ಯತೆ*
ಬೆಂಗಳೂರು : ದೇಶದ ಜನತೆಯ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ , ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು.
*ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ*
ಈ ರೀತಿಯ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ . ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು
ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.
*ಮೇ 9 ಕ್ಕೆ ಸಚಿವ ಸಂಪುಟ ಸಭೆ*
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ , ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.
50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
*ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ*
ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾರಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು.
*ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ*
ಸಮೀಕ್ಷೆಯ ಬಗ್ಗೆ ಈ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು.
.*ಶೇ 93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದಾರೆ*
ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ 5.90 ಕೋಟಿ ಜನರನ್ನು ಒಳಪಡಿಸಲಾಗಿದೆ. ಶೇ 93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದು, ಶೆ 100% ಸಮೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದರು.
ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡಿ, ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಮಾಡಲಾಗುವುದು ಎಂದರು.
ಮೇ 9 ರಂದು ಬಹುತೇಕ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗುವುದು ಎಂದರು.
*ವರದಿಗೆ ದತ್ತಾಂಶ ಲಭ್ಯ*
1992 ರಲ್ಲಿ ಇಂದಿರಾ ಸಾಹಾನಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಮಂಡಲ್ ಸಮಿತಿ ವರದಿಗೆ ದತ್ತಾಂಶ ಏನು ಎಂದು ಸ್ಪಷ್ಟವಾಗಿ ಪ್ರಶ್ನಿಸಿತ್ತು. ಈಗ ಕರ್ನಾಟಕ, ಬಿಹಾರ, ತೆಲಂಗಾಣದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.