*ಹದಿಮೂರು ವರ್ಷಗಳ ವಿಚಾರಣೆ ನಂತರ ಸಿಬಿಐ ಕೋರ್ಟಿನಿಂದ ತೀರ್ಪು ಪ್ರಕಟ*
ಹೈದರಾಬಾದ್: ಅಕ್ರಮ ಗಣಿಗಾರಿಕೆಯ ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ಇಂದು ತೀರ್ಪು ನೀಡಿದೆ.
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ – ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆಯಲ್ಲದೇ ಇದೇ ಪ್ರಕರಣದಲ್ಲಿ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ಹೇಳಿದೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಿ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ರೆಡ್ಡಿ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ರೆಡ್ಡಿ ಅವರ ವಕೀಲ ಜಿತೇಂದರ ರೆಡ್ಡಿ ಅವರು ಶಿಕ್ಷೆಯನ್ನು ದೃಢಪಡಿಸಿದ್ದು ಮತ್ತು ಎಲ್ಲಾ ಶಿಕ್ಷೆಗೊಳಗಾದವರೂ ನಾಳೆ ಹೈಕೋರ್ಟ್ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಯೋಜಿಸಿದ್ದಾರೆ ಎಂದು ಹೇಳಿದ್ದಾರೆ.