*ವಿಧಾನಸಭಾ ಕಾರ್ಯದರ್ಶಿ ಯಿಂದ ಅಧಿಕೃತ ಮಾಹಿತಿ*
ಬೆಂಗಳೂರು : ಓಬಳಾಪುರಂ ಗಣಿ ಪ್ರಕರಣದಲ್ಲಿ
ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಒಳಗಾಗಿರುವ ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಈ ಕುರಿತು ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ರೆಡ್ಡಿ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಿ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿ ತೀರ್ಪು ಪ್ರಕಟಿಸಿದೆ.