*ವಾರದಲ್ಲಿ ಕೋರ್ಟ್ ಗೆ ಶರಣಾಗಲು ಆದೇಶ*
ಬೆಂಗಳೂರು: ಧಾರವಾಡ ಗ್ರಾಮೀಣ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ದೊಡ್ಡ ಶಾಕ್ ನೀಡಿದ್ದು ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಪ್ರಕರಣದಲ್ಲಿ ಅವರ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಅಲ್ಲದೇ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ಆದೇಶದಲ್ಲಿ ಸೂಚಿಸಿರುವ ಕಾರಣ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಭೀತಿ ಶುರುವಾಗಿದೆ.ಜನಪ್ರತಿನಿಧಿಗಳ ಕೋರ್ಟ್ ಗೆ ಶರಣಾದ ತಕ್ಷಣ ಜೈಲಿಗೆ ಕಳುಹಿಸುವ ಸಾಧ್ಯತೆ ಇದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ 2021 ರ ಆಗಷ್ಟ್ 11 ರಂದು ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಸಾಕ್ಷಿಗಳಿಗೆ 1 ಲಕ್ಷ ರೂ. ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದತಿಗೆ ಮನವಿ ಮಾಡಿತ್ತು.ಅದನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿ ಜಾಮೀನು ರದ್ದುಗೊಳಿಸಿದೆ.
2016 ರ ಜೂನ್ 15 ರಂದು ಯೋಗೇಶ್ ಗೌಡ ಕೊಲೆ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.
ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.