*ನಮ್ಮ ಮೆಟ್ರೋ ಗೆ ಬಸವ ಮೆಟ್ರೋ ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು*
ಬೆಂಗಳೂರು :ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.
ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಸಿದ್ದರಾಮಯ್ಯ ಅವರು ನುಡಿದರು.
ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.
ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು.
ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.
ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಎಂದರು.
ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.