ದಾವಣಗೆರೆ : ರಾಜ್ಯ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ದಾವಣಗೆರೆಯ ಧಣಿ ಎಂದೇ ಕರೆಸಿಕೊಳ್ಳುತ್ತಿದ್ದ ಶಾಮನೂರು
ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಶಂಕರಪ್ಪ ಅವರು ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ.
ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಸಮರ್ಥವಾಗಿ ಮುನ್ನಡೆಸಿದ್ದರು.
1931ರ ಜೂನ್ 16ರಂದು ಜನಿಸಿದ್ದ ದಾವಣಗೆರೆಯಲ್ಲಿ ಜನಿಸಿದ್ದ ಅವರು, ದಾವಣಗೆರೆಯಲ್ಲಿ ತಮ್ಮ ಶಾಲಾ -ಕಾಲೇಜು ಶಿಕ್ಷಣವನ್ನು ಪೂರೈಸಿದ ನಂತರ, ಉದ್ಯಮ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಉದ್ಯಮಿಯಾಗಿ, ಶಿವಶಂಕರಪ್ಪನವರು ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ನ ಅಧ್ಯಕ್ಷರಾಗಿದ್ದಾರೆ. ಈ ಸಂಸ್ಥೆಯ ಅಡಿಯಲ್ಲಿ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮುಂತಾದ ಅನೇಕ ಶೈಕ್ಷಣಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ, ಅವರು ಸಕ್ಕರೆ ಕಾರ್ಖಾನೆಗಳು ಮತ್ತು ಡಿಸ್ಟಿಲರಿಗಳನ್ನು ಒಳಗೊಂಡಿರುವ ಶಾಮನೂರು ಗ್ರೂಪ್ನ ಮುಖ್ಯಸ್ಥರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿದ್ದಾರೆ.

1969 ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಹಲವು ದಶಕಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದರು. 1994 ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2023 ರಲ್ಲಿ ನಡೆದ ಚುನಾವಣೆಯಲ್ಲಿ 57.59% ಮತಗಳೊಂದಿಗೆ ತಮ್ಮ ಆರನೇ ಅವಧಿಗೆ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯಕುಮಾರ ಅವರನ್ನು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಶಾಮನೂರು ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಕೂಡ ದಾವಣಗೆರೆ ಉತ್ತರ ಕ್ಷೇತ್ರದಿಂದ ಶಾಸಕರಾಗಿ ಪ್ರಸಕ್ತ ಸಚಿವರಾಗಿದ್ದು ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರು ಸಂಸದರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸಹಿತ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.



