*ಗೋಕರ್ಣಕ್ಕೆ ತೆರಳುತ್ತಿದ್ದ ಬಸ್, ಕಂಟೇನರ್ ಲಾರಿ ಮಧ್ಯೆ ಅಪಘಾತ*
ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಗೆ ಬೆಂಕಿ ಹತ್ತಿಕೊಂಡು 18 ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಲಾರಿಯೊಂದು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದೆ.ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಡಿಕ್ಕಿಯ ರಭಸಕ್ಕೆ ಬಸ್ ರಸ್ತೆ ಮಧ್ಯೆ ಬೆಂಕಿಗಾಹುತಿಯಾಗಿ ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿದ ಕಾರಣ ಬಸ್ ನೊಳಗಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಮೃತಪಟ್ಟಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, 32 ಆಸನಗಳ ಸಾಮರ್ಥ್ಯದ ಬಸ್ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ 15 ಮಹಿಳೆಯರು ಮತ್ತು 14 ಪುರುಷರು ಸೇರಿದ್ದಾರೆ. ಹೆಚ್ಚಿನ ಪ್ರಯಾಣಿಕರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೂಲದವರಾಗಿದ್ದು ಉಳಿದವರು ಕುಮಟಾ ಮತ್ತು ಶಿವಮೊಗ್ಗದವರು, ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಕೆಲವರು ಸಮಯಪ್ರಜ್ಞೆಯಿಂದ ಬಸ್ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಸುಮಾರು 30 ಕಿಲೋಮೀಟರ್ವರೆಗೆ ಸಂಚಾರ ದಟ್ಟಣೆ ಉಂಟಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿವೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆಯಲ್ಲದೆ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.ಹದಿನೆಂಟು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಸ್ನಲ್ಲಿ 29 ಮಂದಿ ಸಂಧ್ಯಾ, ಮಂಜುನಾಥ್, ದಿಲೀಪ್, ಶಶಾಂಕ್, ಬಿ.ಬಿಂಧು, ಪ್ರೀತೀಶ್ವರನ್, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್, ಜಿ.ನಂದಿತಾ, ಹೆಚ್.ದೇವಿಕಾ, ಮೇಘರಾಜ್, ಎಸ್.ಎನ್.ಮಸ್ರತ್ಉನ್ನೀಸಾ, ಸಯಿದ್ ಜಮೀರ್ ಗೌಸ್, ಎಸ್ಗಗನಶ್ರೀ, ರಶ್ಮಿ ಮಹಲೆ, ಆರ್.ರಕ್ಷಿತಾ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.



