ಬೆಂಗಳೂರು :ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಗಳು ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ ಇಂಡಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಿದ್ದು ಮಾಜಿ ಸಚಿವ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಜು. 9ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಮಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶವನ್ನು ಇಂದು ಪ್ರಕಟಿಸಿತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಮರು ಸ್ಥಾಪನೆ ಆಗಲಿದೆ.
ವೈಯಕ್ತಿಕ ಐದು ಲಕ್ಷ ರೂ. ಬಾಂಡ್, ಅಷ್ಟೇ ಮೊತ್ತದ ಎರಡು ಶೂರಿಟಿ ಒದಗಿಸಬೇಕು, ತನಿಖೆಗೆ ಸಹಕರಿಬೇಕು, ನ್ಯಾಯಾಲಯದ ಅನುಮತಿ ಇಲ್ಲದೆ ದೇಶದಿಂದ ಹೊರಗಡೆ ಹೋಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಏ. 15ರಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ಮತ್ತು ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಿನಯ್ ಕುಲಕರ್ಣಿ ಸೇರಿ 17 ಮಂದಿ ಆರೋಪಿಗಳನ್ನು ಅಪರಾಧಿ ಎಂದು ಘೋಷಿಸಿತ್ತು.



