ಹುಬ್ಬಳ್ಳಿ ಕೋರ್ಟಿನಿಂದ ಮಹತ್ವದ ತೀರ್ಪು : 25ರಂದು ಶಿಕ್ಷೆ ಪ್ರಮಾಣ ಪ್ರಕಟ*
ಹುಬ್ಬಳ್ಳಿ: ರಾಜ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ದೋಷಿ ಎಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾಯಾಧೀಶರಾದ ಪಲ್ಲವಿ ಅವರು ನವೆಂಬರ್ 25ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲು ದಿನಾಂಕ ನಿಗದಿಪಡಿಸಿದ್ದಾರೆ.

2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯ ಮನೆಯಲ್ಲಿ ಮಲಗಿದ್ದ ಅಂಜಲಿಯನ್ನು ಎಬ್ಬಿಸಿ ಚಾಕುವಿನಿಂದ ಹಲವು ಬಾರಿ ಇರಿದು ಆರೋಪಿ ಗಿರೀಶ್ ಹತ್ಯೆಗೈದಿದ್ದ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪದ ಪರಿಣಾಮ ಕೆಲ ಅಧಿಕಾರಿಗಳ ತಲೆದಂಡ ಆಗಿತ್ತು. ತದನಂತರ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಒಟ್ಟು 494 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಉಭಯತರ ವಾದ-ಪ್ರತಿವಾದಗಳನ್ನು ಆಲಿಸಿ, ಸಾಕ್ಷಿಗಳ ಹೇಳಿಕೆ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಬಳಿಕ ಆರೋಪಿಯನ್ನು ದೋಷಿ ಎಂದು ಘೋಷಿಸಿದೆ.



