ಹುಬ್ಬಳ್ಳಿ: ರಾಜ್ಯಾದ್ಯಂತ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವನಾಥ ಸಾವಂತ್ ಗೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಕಳೆದ ದಿ. 21ರಂದು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ .ಐಪಿಸಿ 451ರಡಿ ಜೀವಾವಧಿ ಶಿಕ್ಷೆ ಅಲ್ಲದೆ 25 ಸಾವಿರ ದಂಡ, ಐಪಿಸಿ 302ರಡಿ ಎರಡು ವರ್ಷ ಶಿಕ್ಷೆ, ಹತ್ತು ಸಾವಿರ ದಂಡ ಹಾಗೂ ಐಪಿಸಿ 201ರಡಿ ಸಾಕ್ಷಿ ನಾಶದಲ್ಲಿ ಮೂರು ವರ್ಷ ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಲಾಗಿದೆ.
ನ್ಯಾಯಾಧೀಶರಾದ ಶ್ರೀಮತಿ ಪಲ್ಲವಿ ಅವರು ಈ ಮಹತ್ವದ ಆದೇಶ ಪ್ರಕಟಿಸಿದರು.
ಪ್ರಕರಣದಲ್ಲಿ ಸಿಐಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಆರ್. ಕೆ.ಕಾಳೆ ವಾದ ಮಂಡಿಸಿದ್ದರು.
2024ರ ಮೇ 15ರಂದು ಬೆಳಗಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಈ ಭೀಕರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅಲ್ಲದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಾಗೆಯೇ
ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪವೂ ತೀವ್ರ ಚರ್ಚೆಗೆ ಗ್ರಾಸವಾಗಿ ಕೆಲವು ಖಾಕಿ ಅಧಿಕಾರಿಗಳ ತಲೆದಂಡ ಸಹ ಆಗಿತ್ತು.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ತನಿಖೆ ಕೈಗೆತ್ತಿಕೊಂಡ ಸಿಐಡಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಒಟ್ಟು 435 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಿಸಿಟಿವಿ ದೃಶ್ಯಾವಳಿ, ಪ್ರತ್ಯಕ್ಷ ಸಾಕ್ಷಿಗಳು ಸೇರಿದಂತೆ ಒಟ್ಟು 85 ಸಾಕ್ಷಿಗಳನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಅಂಜಲಿ ಮತ್ತು ಆರೋಪಿಯ ನಡುವಿನ ವೈಮನಸ್ಸೇ ಕೊಲೆಗೆ ಕಾರಣ ಎಂಬ ಅಂಶವನ್ನೂ ತನಿಖೆಯಲ್ಲಿ ಪ್ರಸ್ತಾಪಿಸಲಾಗಿತ್ತು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದಗಳನ್ನು ಆಲಿಸಿ, ಸಾಕ್ಷಿಗಳ ಹೇಳಿಕೆ ಹಾಗೂ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಆರೋಪಿಯನ್ನು ದೋಷಿ ಎಂದು ಘೋಷಿಸಿ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದೆ.




