ಎರಡು ವಾರಗಳಲ್ಲಿ ಶರಣಾಗಲು ಸುಪ್ರೀಂ ಸೂಚನೆ
ಹೊಸದಿಲ್ಲಿ: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಹಿನ್ನಡೆಯಾಗಿದ್ದು, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು,ಎರಡು ವಾರಗಳ ಒಳಗಾಗಿ ಶರಣಾಗುವಂತೆ ಸೂಚಿಸಿದೆ.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಇಂದು ಈ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಆದೇಶ ನೀಡಿದೆ.
ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠವುಕಳೆದ ಜುಲೈ 31ರಂದು ಅವರ ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.ಆದರೆ, ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.



