**ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ 145 ಕೋಟಿ ವಹಿವಾಟು*
ಹೊಸದಿಲ್ಲಿ : ಕೇಂದ್ರ ಸರ್ಕಾರ ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿ, “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಮತ್ತು “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ”ಯಡಿ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.
2019ರಲ್ಲಿ ಶುರುವಾದ “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಯೋಜನೆಯಡಿ ಸುಮಾರು 145 ಕೋಟಿ ವಹಿವಾಟು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
*11.80 ಲಕ್ಷ ಕೋಟಿ:* ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿದ್ದು, ಇದರ ಬಜೆಟ್ 11.80 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಸಚಿವರು ವಿವರಿಸಿದರು.
*497 ಲಕ್ಷ ಮೆ. ಟನ್ ಆಹಾರ ಧಾನ್ಯ ವಿತರಣೆ:* 2023-24ರಲ್ಲಿ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ” ಯೋಜನೆಯಡಿ, ಸುಮಾರು 81.35 ಕೋಟಿ ಫಲಾನುಭವಿಗಳಿಗೆ 497 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ಹೇಳಿದರು.
*ಎಥೆನಾಲ್ ಉತ್ಪಾದನೆ ವೃದ್ದಿ:* ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 1,589 ಕೋಟಿ ಲೀಟರ್ಗೆ ಏರಿದೆ. ಭಾರತದ ದೇಶೀಯ ಅಗತ್ಯಗಳನ್ನು ಪೂರೈಸಲು ಸಾಕಾಗು ವಷ್ಟಿದೆ ಎಂದು ಸಚಿವ ಜೋಶಿ ಇದೇ ವೇಳೆ ತಿಳಿಸಿದರು.