*ಗದಗ ವೈದ್ಯಕೀಯ ಕಾಲೇಜಿಗೆ ಸಹಕಾರ ಭೀಷ್ಮನ ಹೆಸರು*
ಬೆಂಗಳೂರು : ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿರುವುದಾಗಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
ಅವರು ಇಂದು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಚಿವರ ಹೆಚ್.ಸಿ. ಮಹಾದೇವಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ವರದಿಯಲ್ಲಿ 4 ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ದಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು . ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿರುವ ಬಗ್ಗೆ ಸಚಿವರು ವಿವರಿಸಿದರು.
ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದರು.
*ಕೆ.ಎಚ್ ಪಾಟೀಲ ಹೆಸರು*
ಗದಗಿನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ.
ಈ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಇತ್ತೀಚೆಗೆ ಸಿಎಂ ಸಹ ಇದನ್ನು ಪ್ರಕಟಿಸಿದ್ದರು.