*ಗೋಪಾಲ ಜೋಶಿ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ : ಪ್ರಹ್ಲಾದ್ ಜೋಶಿ ಸ್ಪಷ್ಟನೆ*
ಬೆಂಗಳೂರು : ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿದ ಹಾಗೂ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ ಹಾಗೂ ಸಹೋದರನ ಪುತ್ರ ಅಜಯನನ್ನು ಬೆಂಗಳೂರು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ .
ವಿಜಯಪುರದ ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ ಹಿನ್ನೆಲೆಯಲ್ಲಿ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಅವರ ಪುತ್ರ ಅಜಯ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಿದ್ದು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಗೋಪಾಲ ಜೋಶಿ ತಲೆಮರೆಸಿಕೊಂಡು ಕೊಲ್ಲಾಪುರದ ವಸತಿ ಗೃಹದಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಲಾಡ್ಜ್ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದು ಪಂಚನಾಮೆ ಮಾಡಿದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ವಿಜಯಲಕ್ಷ್ಮೀ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ನಿನ್ನೆ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ನನಗೆ ಸಹೋದರಿಯೇ ಇಲ್ಲ ಮತ್ತು ಸಹೋದರ ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದಿದ್ದಾರೆ.
ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದು ಜೋಶಿ ಸ್ಪಷ್ಟಪಡಿಸಿದ್ದಾರೆ.