*ಗಣರಾಜ್ಯೋತ್ಸವ ಸ್ತಬ್ಧಚಿತ್ರದ ವಿವರ ನೀಡಿದ ವಾರ್ತಾ* *ಇಲಾಖೆ ಆಯುಕ್ತ ನಿಂಬಾಳ್ಕರ್* / *ಮುನ್ನಡೆಸಲಿದೆ 18 ಕಲಾವಿದರ ತಂಡ*
ಹೊಸದಿಲ್ಲಿ : ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ.
ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್ಪಥ್) ದಿ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ದಿಲ್ಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ, ಖಡಕ್ ಐಪಿಎಸ್ ಹೇಮಂತ್ ಎಂ ನಿಂಬಾಳ್ಕರ್ ವಿವರ ನೀಡಿದರು.
ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ನಿಂಬಾಳ್ಕರ್ ತಿಳಿಸಿದರು.
ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.
ಭಾಗವಹಿಸುವ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು (Lakkundi – The Cradle of Stone Craft) ಸಹಿತ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು.
ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಸಂಗೀತ ನಿರ್ದೇಶಕ ಪ್ರವೀಣ್ ಡಿ. ರಾವ್ ಅವರ ʼಕನ್ನಡ ಸಂಗೀತʼವನ್ನು ಹಾಗೆಯೇ ಉಳಿಸಿಕೊಂಡಿದೆ. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ ಕಲಾವಿದರಿಂದ ಕೂಡಿರುವ 18 ಮಂದಿ ತಂಡವನ್ನು ಕಲಾವಿದರಾದ ಲಿಂಗಯ್ಯ ಅವರು ಮುನ್ನಡೆಸುತ್ತಾರೆ. ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ. ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಳ್ಳಲಿದ್ದಾರೆ.
*ಪ್ರಶಸ್ತಿಗಳ ಸರಮಾಲೆ* 2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಸಿ. ಆರ್. ನವೀನ್, ಸ್ತಬ್ಧಚಿತ್ರದ ನೋಡಲ್ ಅಧಿಕಾರಿ ವಾರ್ತಾ ಇಲಾಖೆ,ಶಶಿಧರ ಅಡಪ, ಅಂತರರಾಷ್ಟ್ರೀಯ ಕಲಾನಿರ್ದೇಶಕ, ಸತೀಶ್ ರೈ, ಪ್ರತಿರೂಪಿ ಸಂಸ್ಥೆ ಇವರುಗಳು ಗೋಷ್ಠಿಯಲ್ಲಿ ಇದ್ದರು.