ಡಿಪಿಎಆರ್ ಗೆ ಸಂಪುಟ ಅಸ್ತು/ ಕುನ್ಹಾ ವರದಿ ಅಂಗೀಕಾರ
ಬೆಂಗಳೂರು : ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಸ್ಕಿ ಯೋಜನೆಯಡಿ 100 ಕೋಟಿ , ಪ್ರಸಾದ ಯೋಜನೆಯಡಿ 18 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 97 ಕೋಟಿ ಪ್ರವಾಸೋದ್ಯಮ ಇಲಾಖೆಯ 15 ಕೋಟಿ ಸೇರಿದಂತೆ 215.37 ಕೋಟಿ ರೂ.ಗಳ ಮೊತ್ತದಲ್ಲಿ ಕೆಟಿಟಿಪಿ ಕಾಯ್ದೆಯಡಿ ಅನುಷ್ಠಾನ ಗೊಳಿಸಲು ಡಿಪಿಎಆರ್ ಗೆ ಸರ್ಕಾರದ ಅನುಮೋದನೆ ನೀಡಲು ಪ್ರವಾಸೋದ್ಯಮ ಇಲಾಖೆಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳನ್ನು ಅನುಷ್ಠಾನ ಅಧಿಕಾರಿಯನ್ನಾಗಿ ನೇಮಿಸಲು ಹಾಗೂ ಯೋಜನೆ ಕೈಗೆತ್ತಿಕೊಳ್ಳಲು ಇಂದು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಚರ್ಚೆಯ ನಂತರ ಜೂನ್ 4, 2025ರ ಆರ್ ಸಿ ಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಕುನ್ಹಾ ವರದಿಯನ್ನು ಅಂಗೀಕರಿಸಲಾಗಿದ್ದು ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿತು.
ಆರ್.ಸಿ.ಬಿ, ಡಿ.ಎನ್. ಎ ಎಂಟರ್ ಟೈನ್ ಮೆಂಟ್ ನೆಟ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, , ಕೆ ಎಸ್. ಸಿ ಎ ಅಧ್ಯಕ್ಷ ರಘುರಾಮ್ ಭಟ್, ಕೆ ಎಸ್ ಸಿ ಎ ಮಾಜಿ ಅಧ್ಯಕ್ಷ, ಎ ಶಂಕರ್, ಕೆ ಎಸ್ ಸಿ ಎ ಮಾಜಿ ಖಜಾಂಚಿ ಜಯರಾಮ್,ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ ವರ್ಕ್ಸ್ ಇವರುಗಳ ಮೇಲೆ ಕ್ರಮ ಜರುಗಿಸಲಾಗುವುದು.
ಬಾಲ್ಯ ವಿವಾಹ ನಿಷೇಧ ವಿಧೇಯಕಕ್ಕೆ ಅನುಮೋದನೆ ಸಹ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಾಗಿದೆ.
*ಮಹಾದಾಯಿ : ಕೇಂದ್ರದಿಂದ ಅನ್ಯಾಯ*
ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಅವರೇ ನನಗೆ ತಿಳಿಸಿದ್ದಾರೆ ಎಂದು ಸಾವಂತ್ ಅವರು ಇಂದು ವಿಧಾನಸಭೆಯಲ್ಲಿ ಹೇಳಿದ್ದಾರೆ.ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಷಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ದ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.